ತಿರುವನಂತಪುರ: ಲವ್ ಬ್ರೇಕಪ್ ಮಾಡಿಕೊಳ್ಳಲು ಒಪ್ಪದ ಬಾಯ್ಫ್ರೆಂಡ್ಗೆ ಯುವತಿಯೊಬ್ಬಳು ವಿಷವುಣಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ಸುಮಾರು 8 ಗಂಟೆಗಳ ಕಾಲ ವಿಚಾರಣೆ ಬಳಿಕ ಆರೋಪಿ ತಪ್ಪೊಪ್ಪಿಕೊಂಡ ಬಳಿಕ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ನಿನ್ನೆ (ಅ.31) ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಮೃತ ಶರೋನ್ ರಾಜ್ ತಿರುವನಂತಪುರ ಮೂಲದವನು ಎಂದು ಕೇರಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅ. 14ರಂದು ಶರೋನ್ ರಾಜ್ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟಿದ್ದಾನೆ. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.
ಗ್ರೀಷ್ಮಾ ಮತ್ತು ರಾಜ್ ಸುಮಾರು ಒಂದು ವರ್ಷಕ್ಕೂ ಅಧಿಕ ಸಮಯದಿಂದ ಪ್ರೀತಿಸುತ್ತಿದ್ದರು. ಈ ನಡುವೆ 2022ರ ಫೆಬ್ರವರಿಯಲ್ಲಿ ಇಬ್ಬರ ನಡುವೆ ಕೆಲವು ಸಮಸ್ಯೆಗಳು ಮೂಡಿದವು. ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಗದಿಪಡಿಸಲಾಯಿತು. ಆದಾಗ್ಯೂ, ಇಬ್ಬರು ತಮ್ಮ ಸಂಬಂಧವನ್ನು ಮುಂದುವರೆಸಿದ್ದರು. ಇತ್ತೀಚೆಗೆ ಮತ್ತೆ ಇಬ್ಬರು ಕೆಲವು ಸಮಸ್ಯೆಗಳನ್ನು ಎದುರಿಸಿದರು. ಅಂತಿಮವಾಗಿ ರಾಜ್ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್ ಬ್ರೇಕಪ್ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ಇದಾದ ಬಳಿಕ ಅವನನ್ನು ಕೊಲ್ಲಲು ನಿರ್ಧರಿಸಿ, ಅಂತಿಮವಾಗಿ ವಿಷವುಣಿಸಿ ಕೊಂದೇ ಬಿಟ್ಟಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು.
ಶರೋನ್ ರಾಜ್ ಅಕ್ಟೋಬರ್ 25ರಂದು ತಿರುವನಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು. ಇದು ಆತನ ಗೆಳತಿಯ ಪೂರ್ವಯೋಜಿತ ಕೊಲೆ ಎಂದು ಆತನ ಕುಟುಂಬದವರು ಆರೋಪಿಸಿ, ದೂರು ದಾಖಲಿಸಿದ್ದರು. ಆದರೆ, ಎಲ್ಲವು ಗೊತ್ತಿದ್ದರೂ ಶರೋನ್ ರಾಜ್ ಸಾವಿಗೂ ಮುನ್ನ ಯಾರನ್ನೂ ಅನುಮಾನಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದು, ಅವರ ನಿಜವಾದ ಪ್ರೀತಿಗೆ ಕನ್ನಡಿ ಹಿಡಿದಂತಿತ್ತು. ಹೀಗಾಗಿ ಈ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಇದೀಗ 8 ಗಂಟೆಗಳ ವಿಚಾರಣೆಯ ನಂತರ ಆರೋಪಿ ಗ್ರೀಷ್ಮಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಆಕೆಯನ್ನು ತಿರುವನಂತಪುರದಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ. (ಏಜೆನ್ಸೀಸ್)
